ಸಂದರ್ಭ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ಇದ ರಿಂದಾಗಿ, ಮಾತುಕತೆ ಮೂಲಕವೇ ವಿವಾದ ಬಗೆಹರಿಸಲು ಮುಂದಾಗಿದ್ದ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.
- ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯ ಮೂರ್ತಿಗಳಾದ ವಿಕ್ರಮ್ನಾಥ್ ಹಾಗೂ ಎನ್.ವಿ.ಅಂಜಾರಿಯಾ ಅವರಿದ್ದ ಪೀಠವು, ‘1956ರ ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆಯಡಿ ಕೇಂದ್ರ ಸರ್ಕಾರವು ಶಾಸನಬದ್ದ ಕಾರ್ಯಗಳನ್ನು ನಡೆಸಲು ಯಾವುದೇ ಕಾನೂನು ಅಡಚಣೆ ಇಲ್ಲ’ ಎಂದು ಸ್ಪಷ್ಟಪಡಿಸಿದೆ.
- ವಿವಾದ ಪರಿಹರಿಸಲು ನ್ಯಾಯ ಮಂಡಳಿ ರಚಿಸುವುದಕ್ಕೆ ಕೇಂದ್ರಕ್ಕೆ ಯಾವುದೇ ಅಡಚಣೆ ಇಲ್ಲ.
- ತಮಿಳುನಾಡು ತನ್ನ ದೂರನ್ನು ನ್ಯಾಯ ಮಂಡಳಿಯ ಮುಂದೆ ಸಲ್ಲಿಸಬೇಕು ಎಂದು ಪೀಠ ನಿರ್ದೇಶಿಸಿತು. 2018ರಲ್ಲಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಪೀಠ ವಿಲೇವಾರಿ ಮಾಡಿತು.
- ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟ ಕೆರೆಯಿಂದ ಹೊಸ-ಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪೆನ್ನಾರ್ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ.
- ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ಗೆ 2018ರ ಮೇ 18ರಂದು ಅರ್ಜಿ ಸಲ್ಲಿಸಿತ್ತು. ಜಲವಿವಾದ ನ್ಯಾಯಮಂಡಳಿ ಒತ್ತಾಯಿಸಿ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ 2019ರ ನವೆಂಬರ್ ತಿಂಗಳಲ್ಲಿ ಮನವಿ ಮಾಡಿತ್ತು.
- ಜಲಶಕ್ತಿ ಸಚಿವಾಲಯವು 2020ರಲ್ಲಿ ಸಂಧಾನ ಸಭೆ ನಡೆಸಿತ್ತು. ಆದರೆ, ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿರಲಿಲ್ಲ. ಹೊಸದಾಗಿ ಸಂಧಾನ ನಡೆಸುವಂತೆ ಕರ್ನಾಟಕ ಸರ್ಕಾರವು ಕೇಂದ್ರವನ್ನು 2024ರ ಜೂನ್ನಲ್ಲಿ ಒತ್ತಾಯಿಸಿತ್ತು.
- ಈ ನಡುವೆ, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ, ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಜಲಶಕ್ತಿ ಸಚಿವಾಲಯವು ಹೊಸ ಸಂಧಾನ ಸಮಿತಿ ರಚಿಸಿತ್ತು. ಈ ಸಮಿತಿಯು ಉಭಯ ರಾಜ್ಯಗಳ ನಡುವೆ ಒಂಬತ್ತು ಸಭೆಗಳನ್ನು ನಡೆಸಿತ್ತು.
- జల ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಮಾತುಕತೆಯ ಮೂಲಕ ಈ ವಿವಾದವನ್ನು ಸೌಹಾರ್ದ-ಯುತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರವು ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದಿತ್ತು.
- ಕರ್ನಾಟಕದ ಜಲಾನಯನ ಪ್ರದೇಶದಲ್ಲಿ ಒಟ್ಟು 11.77 ಟಿಎಂಸಿ ನೀರಿನಲ್ಲಿ 9.77 ಟಿಎಂಸಿ ನೀರನ್ನು ಬಳಸಲು ಯೋಜಿಸಲಾಗಿದೆ. ಇದರಲ್ಲಿ 2 ಟಿಎಂಸಿ ಮತ್ತು ವಾಡಿಕೆಗಿಂತ ಹೆಚ್ಚು ಮಳೆ ಬಂದಾಗ ದೊರೆಯುವ ಹೆಚ್ಚುವರಿ ನೀರು ತಮಿಳುನಾಡಿಗೆ ಉಳಿಯುತ್ತದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿತ್ತು.